ತತ್ವಪದಗಳು ಸಾರ್ವಕಾಲಿಕ ಬೆಳಕನಿಧಿ: ಕಾ.ತ.ಚಿಕ್ಕಣ್ಣ

Must Read

ಬೆಂಗಳೂರು – ತತ್ವಪದಗಳು ಎಲ್ಲ ಕಾಲಕ್ಕೂ ಸಲ್ಲುವಂತಹ ಬೆಳಕನ್ನು ನೀಡುವ ಸೃಜನಶೀಲ ಸಂರಚನೆಗಳಾಗಿವೆ ಎಂದು ಕರ್ನಾಟಕ ಸರ್ಕಾರದ ಸಂತಕವಿ ಕನಕದಾಸ ಮತ್ತು ತತ್ವಪದಕಾರರ ಅಧ್ಯಯನ ಕೇಂದ್ರದ ಅಧ್ಯಕ್ಷರಾದ ಕಾ.ತ.ಚಿಕ್ಕಣ್ಣ ಅವರು ಅಭಿಪ್ರಾಯಪಟ್ಟರು.

ಬೆಂಗಳೂರಿನ ಕೆ.ನಾರಾಯಣಪುರದ ಕ್ರಿಸ್ತು ಜಯಂತಿ ಡೀಮ್ಡ್ ವಿಶ್ವವಿದ್ಯಾನಿಲಯದ ಕನ್ನಡ ವಿಭಾಗ ಹಾಗೂ ಕರ್ನಾಟಕ ಸರ್ಕಾರದ ಸಂತಕವಿ ಕನಕದಾಸ ಮತ್ತು ತತ್ವಪದಕಾರರ ಅಧ್ಯಯನ ಕೇಂದ್ರದ ಸಹಯೋಗದಲ್ಲಿ ಹಮ್ಮಿಕೊಳ್ಳಲಾಗಿದ್ದ ‘ಕನ್ನಡ ತತ್ವಪದ ಸಾಹಿತ್ಯ: ಸಾಂಸ್ಕೃತಿಕ ಅನುಸಂಧಾನ’ ವಿಷಯ ಕುರಿತಾದ ಒಂದು ದಿನದ ರಾಷ್ಟ್ರೀಯ ವಿಚಾರಸಂಕಿರಣದ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಕನ್ನಡ ಸಾಹಿತ್ಯ ಚರಿತ್ರೆಯಲ್ಲಿ ತತ್ವಪದ ಸಾಹಿತ್ಯ ರೂಪುಗೊಂಡಿದ್ದ ಕಾಲವನ್ನು ಕತ್ತಲಯುಗ ಎಂದು ಕರೆದು ವಿಸ್ಮೃತಿಗೆ ತಳ್ಳಲಾಗಿತ್ತು. ಆದರೆ ಆ ಕತ್ತಲೆಯುಗದಲ್ಲಿಯೇ ಜಗತ್ತಿಗೆ ಮಹೋನ್ನತ ಬೆಳಕು ನೀಡುವ ನುಡಿರತ್ನಗಳು ರಚನೆಗೊಂಡಿದ್ದವು. ತತ್ವಪದಕಾರರು ಪರಂಪರೆಯೊಂದಿಗೆ ಸಂವಾದ ನಡೆಸುತ್ತಾ ವರ್ತಮಾನಕ್ಕೆ ಸೂಕ್ತವಾಗಿ ಅನ್ವಯವಾಗುವ ಹಾಗೂ ಭವಿಷ್ಯಕ್ಕೆ ಬೇಕಾದ ಜಾಗೃತಿಯನ್ನು ನೀಡುವ ಮೂಲಕ ಕನ್ನಡ ಸಂಸ್ಕೃತಿಯಲ್ಲಿ ತಮ್ಮದೇ ಆದ ಮೌಲ್ಯಯುತ ಸ್ಥಾನವನ್ನು ಪಡೆದುಕೊಂಡಿವೆ. ಸಮಾಜದಲ್ಲಿರುವ ಜಾತಿಭೇದ, ಲಿಂಗಭೇದ, ವರ್ಣಭೇದ ಮೊದಲಾದ ವಿಷಕಾರಿ ಮನಸ್ಥಿತಿಗೆ ತತ್ವಪದಕಾರರು ತಮ್ಮ ನುಡಿ-ನಡೆಗಳ ಮೂಲಕ ಚಿಕಿತ್ಸೆ ನೀಡುವ ಮೂಲಕ ಬದುಕಿನ ಸತ್ಯ ಮತ್ತು ಸಾರ್ಥಕತೆಯನ್ನು ಸಾಧಿಸಿತೋರಿದ್ದಾರೆ ಎಂದು ತಿಳಿಸಿದರು.

ವಿಶ್ವಾತ್ಮಕವಾದ ಸಂವೇದನೆಯ ತತ್ವಪದ ಸಾಹಿತ್ಯ:     ವಿಚಾರಸಂಕಿರಣವನ್ನು ಉದ್ಘಾಟನೆ ಮಾಡಿದ ಕ್ರಿಸ್ತು ಜಯಂತಿ ವಿವಿಯ ಸಂಸೋಧನೆ ಮತ್ತು ಅಭಿವೃದ್ಧಿ ವಿಭಾಗದ ನಿರ್ದೇಶಕರಾದ ಫಾ.ಡಾ.ಮರಿಯಾಲಾಲ್ ಜೋಸೆಫ್ ಅವರು, ಕನ್ನಡದ ತತ್ವಪದಗಳು ಜನಸಾಮಾನ್ಯರ ವೇದಗಳಾಗಿವೆ. ಕನ್ನಡ ಸಾಹಿತ್ಯಕ್ಕೆ ಸಂಗೀತಾತ್ಮಕ ಶಾಸ್ತ್ರೀಯ ಸಂರಚನೆಯ ಜೊತೆಗೆ ವಿಶ್ವಾತ್ಮಕವಾದ ಸಂವೇದನೆಯ ಮೂಲಕ ಮಹತ್ತರವಾದ ಕೊಡುಗೆ ನೀಡಿದ್ದು ತತ್ವಪದ ಸಾಹಿತ್ಯ. ಮಧ್ಯಯುಗೀನ ಕಾಲದ ಭಕ್ತಿ ಚಳವಳಿಯ ಭಾಗವಾಗಿ ಮೂಡಿಬಂದ ವಚನ ಸಾಹಿತ್ಯ ಹಾಗೂ ಕೀರ್ತನ ಸಾಹಿತ್ಯಗಳು ಕರ್ನಾಟಕದಲ್ಲಿ ಮೂಡಿಸಿದ ಸಾಂಸ್ಕೃತಿಕ ಚೈತನ್ಯಶೀಲತೆಯನ್ನು ನಂತರದಲ್ಲಿ ಮುಂದುವರೆಸುವ ಮೂಲಕ ಮತ್ತಷ್ಟು ಎತ್ತರಕ್ಕೆ ಕೊಂಡೊಯ್ದದ್ದು ತತ್ವಪದ ಸಾಹಿತ್ಯವಾಗಿದೆ. ಇಂದಿನ ಆವೇಗದ ಆಧುನಿಕ ಜಗತ್ತಿಗೆ ತತ್ವಪದಕಾರರು ನೀಡಿದ ಅರಿವಿನ ಬೆಳಕು ಅತ್ಯಗತ್ಯವಾಗಿದೆ ಎಂದು ಅಭಿಪ್ರಾಯಪಟ್ಟರು.

ನಿಜತ್ವ ಬೆಳಗುವ ದಾರಿದೀಪ ತತ್ವಪದಗಳು-ಪದ್ಮಾಲಯ ನಾಗರಾಜ್: ಪ್ರಧಾನಗೋಷ್ಠಿಯ ಅಧ್ಯಕ್ಷತೆ ವಹಿಸಿ ತತ್ವಪದಗಳ ಸಾಂಸ್ಕೃತಿಕ ಮಹತ್ವ ಕುರಿತು ಮಾತನಾಡಿದ ಅಚಲ ಸಾಧಕರಾದ ಪದ್ಮಾಲಯ ನಾಗರಾಜ್ ಅವರು, ಜಗತ್ತಿನಾದ್ಯಂತ ಇಂದು ನಡೆಯುತ್ತಿರುವ ಅಧಿಕಾರ ಹಾಗೂ ವ್ಯಾಪಾರದಾಹೀ ರಾಜಕೀಯ ಲಂಪಟ, ಆರ್ಥಿಕ ಲಂಪಟ ಹಾಗೂ ಸಾಮಾಜಿಕ ಅಸಮಾನ ಸೃಷ್ಟಿಗಳು ಮಾನವಲೋಕವನ್ನು ಭ್ರಮೆ ಮತ್ತು ಅಸತ್ಯದತ್ತ ಕೊಂಡೊಯ್ಯುತ್ತಿವೆ. ಅವೈಜ್ಞಾನಿಕ ಕಲ್ಪನೆಗಳನ್ನು ಹುಟ್ಟುಹಾಕುತ್ತಾ ವಾಸ್ತವಿಕತೆಯಿಂದ ದೂರಮಾಡುತ್ತಿವೆ. ಇಂತಹ ಸಂದಿಗ್ಧ ಪರಿಸ್ಥಿತಿಯಲ್ಲಿ ನಿರಂತರ ಆಗುವಿಕೆಯ ಅನಂತವಿಶ್ವದಲ್ಲಿ ನಾವೊಂದು ಬಿಂದುವೆಂಬ ಸತ್ಯದರ್ಶನ ಮಾಡಿಸುವ ಮೂಲಕ ನಿಜತ್ವವನ್ನು ಬೆಳಗುವ ದಾರದೀಪವಾಗಿವೆ ತತ್ವಪದಗಳು ಎಂದು ತಿಳಿಸಿದರು. ‘ತತ್ವಪದಕಾರ್ತಿಯರ ಲೋಕದೃಷ್ಠಿ’ಯನ್ನು ಕುರಿತು ವಿಚಾರಮಂಡನೆ ಮಾಡಿದ ಡಾ.ಶೋಭಾರಾಣಿ ಎನ್. ಅವರು, ‘ತತ್ವಪದಕಾರ್ತಿಯರು ಸಂಸಾರದ ಸಹಯಾನದೊಂದಿಗೇ ಅಧ್ಯಾತ್ಮಿಕ ಸಾಧನೆಯನ್ನು ಮಾಡಬಹುದೆಂದು ಸಾಧಿಸಿತೋರಿದ್ದಾರೆ. ನಿರ್ಭೀತ ನುಡಿಕಾರರು ತತ್ವಪದಕಾರ್ತಿಯರು. ಮಹಿಳಾ ತತ್ವಪದಕಾರರ ಇನ್ನೂ ಎಷ್ಟೋ ತತ್ವಪದಗಳು ಸಂಗ್ರಹವಾಗಬೇಕಿದೆ’ ಎಂದು ಅಭಿಪ್ರಯಪಟ್ಟರು. ‘ಕನ್ನಡ ತತ್ವಪದಗಳು ಮತ್ತು ಬಹುತ್ವ ಭಾರತ’ ಕುರಿತು ಮಾತನಾಡಿದ ರವಿ ಕಂಬಳಿ ಅವರು, ಬಹುಸಂಸ್ಕೃತಿಗಳಿರುವ ಭಾರತದಲ್ಲಿ ಏಕರೂಪೀತನದ ಯಾಜಮಾನ್ಯ ಹೇರುವ ದೌರ್ಜನ್ಯ ಹಾಗೂ ಸಮಸ್ಯೆಗಳಿಗೆ ಪ್ರತಿಕ್ರಿಯೆಯಾಗಿ ಕನ್ನಡ ತತ್ವಪದಕಾರರು ಬಹುತ್ವವನ್ನು ತಮ್ಮ ಸಾಹಿತ್ಯದ ಆಶಯ ಹಾಗೂ ಬದುಕಿನ ಆಚರಣೆಯನ್ನಾಗಿ ಮಾಡಿಕೊಂಡರು. ಮೌಢ್ಯರಹಿತವಾದ ಸಮಸಮಾಜ ಕಲ್ಪನೆ ಅವರದಾಗಿತ್ತು. ತಮಗಿಂತಲೂ ಹಿಂದೆ ಹಲವು ಬಗೆಯ ಬಹುತ್ವದ ಮಾದರಿಗಳನ್ನು ಪ್ರತಿಪಾದಿಸಿದ್ದ ವಚನಕಾರರು ಇವರಿಗೆ ಆದರ್ಶವಾಗಿದ್ದರು ಎಂದು ತಿಳಿಸಿದರು.

ವಿಚಾರ ಸಂಕಿರಣದ ಭಾಗವಾಗಿ ಹೊರತರಲಾಗಿದ್ದ ‘ಕನ್ನಡ ತತ್ವಪದ ಸಾಹಿತ್ಯ: ಸಾಂಸ್ಕೃತಿಕ ಅನುಸಂಧಾನ-ಸಂಪುಟ 1 ಮತ್ತು 2’ ಕೃತಿಗಳನ್ನು ಲೋಕಾರ್ಪಣೆಗೊಳಿಸಲಾಯಿತು. ಪ್ರಸಿದ್ಧ ಗಾಯಕರಾದ ಶ್ರೀ ಖಾಸೀಂ ಮಲ್ಲಿಗೆ ಮಡುವು ತತ್ವಪದ ಗಾಯನವನ್ನು ಪ್ರಸ್ತುತಪಡಿಸಿದರು. ಪರ್ಯಾಯಗೋಷ್ಠಿಗಳಲ್ಲಿ 6೦ಕ್ಕೂ ಹೆಚ್ಚು ಸಂಶೋಧಕರು ಪ್ರಬಂಧ ಮಂಡನೆ ಮಾಡಿದರು. ಕ್ರಿಸ್ತು ಜಯಂತಿ ವಿಶ್ವವಿದ್ಯಾಲಯದ ಮಾನವಿಕ ವಿಭಾಗದ ಡೀನರಾದ ಡಾ.ಗೋಪಕುಮಾರ್ ಎ.ವಿ. ಅವರು ಮುಖ್ಯ ಅತಿಥಿಯಾಗಿದ್ದರು. ಕನ್ನಡ ವಿಭಾಗದ ಮುಖ್ಯಸ್ಥರಾದ ಕ್ಯಾಪ್ಟನ್ ಡಾ.ಸರ್ವೇಶ್ ಬಿ.ಎಸ್. ಅವರು ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು. ವಿಚಾರಸಂಕಿರಣದ ಸಂಯೋಜಕರಾದ ಡಾ.ಕಿರಣಕುಮಾರ್ ಹೆಚ್.ಜಿ ಅವರು ವಂದಿಸಿದರು. ಕನ್ನಡ ಪ್ರಾಧ್ಯಾಪಕರಾದ ಡಾ.ಕುಪ್ಪನಹಳ್ಳಿ ಎಂ.ಭೈರಪ್ಪ ಅವರು ನಿರೂಪಿಸಿದರು. ಕನ್ನಡ ಪ್ರಾಧ್ಯಾಪಕರಾದ ಪ್ರೊ.ಚಂದ್ರಶೇಖರ್ ಎನ್., ಡಾ.ಸೈಯದ್ ಮುಯಿನ್, ಡಾ.ರವಿಶಂಕರ್ ಎ.ಕೆ., ತತ್ವಪದಕಾರರ ಅಧ್ಯಯನ ಕೇಂದ್ರದ ಸಿಬ್ಬಂದಿವರ್ಗದವರಾದ ರಜತಾ ಶೆಟ್ಟಿ ಹಾಗೂ ಸುಪ್ರಿಯಾ ಅವರು ಉಪಸ್ಥಿತರಿದ್ದರು. 200ಕ್ಕೂ ಹೆಚ್ಚು ಅಧ್ಯಾಪಕರು, ಸಂಶೋಧಕರು ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.

LEAVE A REPLY

Please enter your comment!
Please enter your name here

Latest News

ಕವನ : ಶ್ರದ್ಧೆ

ಶ್ರದ್ಧೆಶ್ರದ್ಧೆ ಎಂದರೆ ಕೇವಲ ನಂಬಿಕೆ ಅಲ್ಲ, ಸಾಧನೆಯ ಕೀಲಿ ಕೈ ಆಗಿದೆಯಲ್ಲ ಹೃದಯದಿಂದ ಹೊಮ್ಮುವ ಶಕ್ತಿ ಎಲ್ಲ ಕಣ್ಣಿಗೆ ಕಾಣದ ಅದ್ಭುತ ಅನುಭವದ ಬೆಲ್ಲ ಹೆಜ್ಜೆಗೆ ದಿಕ್ಕು ತೋರುವ ಬೆಳಕ ಸಾಧನೆಯ ಹಾದಿಯ...

More Articles Like This

error: Content is protected !!
Join WhatsApp Group