spot_img
spot_img

ಬೆಮೂಲ್ ಆಡಳಿತ ಮಂಡಳಿಯ ನೂತನ ಅಧ್ಯಕ್ಷರಾಗಿ ಬಾಲಚಂದ್ರ ಜಾರಕಿಹೊಳಿ ಅವಿರೋಧವಾಗಿ ಆಯ್ಕೆ

Must Read

- Advertisement -

ಬೆಳಗಾವಿಯಲ್ಲಿ ೨೫೦ ಕೋ.ರೂ. ವೆಚ್ಚದ ಸ್ವಯಂ ಚಾಲಿತ ಮೆಗಾ ಡೇರಿ ಸ್ಥಾಪನೆಗೆ ಹೆಚ್ಚಿನ ಒತ್ತು – ಬಾಲಚಂದ್ರ ಜಾರಕಿಹೊಳಿ

ಬೆಳಗಾವಿ– ಬೆಳಗಾವಿ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ ಸಂಘಗಳ ಒಕ್ಕೂಟದ ನೂತನ ಅಧ್ಯಕ್ಷರಾಗಿ ಅರಭಾವಿ ಶಾಸಕ ಹಾಗೂ ಕೆಎಂಎಫ್ ನಿರ್ದೇಶಕ ಬಾಲಚಂದ್ರ ಜಾರಕಿಹೊಳಿ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಸೋಮವಾರದಂದು ಇಲ್ಲಿಯ ಜಿಲ್ಲಾ ಹಾಲು ಒಕ್ಕೂಟದ ಸಭಾಗೃಹದಲ್ಲಿ ಜರುಗಿದ ಒಕ್ಕೂಟದ ಆಡಳಿತ ಮಂಡಳಿಯ ಅಧ್ಯಕ್ಷ ಸ್ಥಾನಕ್ಕೆ ಬಾಲಚಂದ್ರ ಜಾರಕಿಹೊಳಿ ಅವರೊಬ್ಬರೇ ನಾಮಪತ್ರ ಸಲ್ಲಿಸಿದ್ದರಿಂದ ಈ ಸ್ಥಾನಕ್ಕೆ ಅವಿರೋಧವಾಗಿ ಆಯ್ಕೆ ನಡೆದಿದೆ.

- Advertisement -

ನಂತರ ನಡೆದ ಅಭಿನಂದನಾ ಕಾರ್ಯಕ್ರಮದಲ್ಲಿ ಮಾತನಾಡಿದ ನೂತನ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು, ಹಿಂದಿನ ಅಧ್ಯಕ್ಷ ವಿವೇಕರಾವ ಪಾಟೀಲ ಮತ್ತು ಒಕ್ಕೂಟದ ಸದಸ್ಯರು ಸರ್ವಾನುಮತದಿಂದ ನನ್ನನ್ನು ಆಯ್ಕೆ ಮಾಡಿದ್ದಾರೆ. ಅದಕ್ಕಾಗಿ ಎಲ್ಲ ಸದಸ್ಯರಿಗೆ ಆಭಾರಿಯಾಗಿರುವುದಾಗಿ ಹೇಳಿದರು.

ಸರಕಾರವು ಸಹಕಾರಿ ಇಲಾಖೆಯಲ್ಲಿ ತಿದ್ದುಪಡಿಯನ್ನು ತರಲು ಉತ್ಸುಕವಾಗಿದೆ. ಈಗಾಗಲೇ ರಾಜ್ಯ ಮಟ್ಟದ ಸಹಕಾರಿ ಮಹಾಮಂಡಳಿಗೆ ಹೋಗಬಯಸುವವರು ಮೊದಲಿಗೆ ಜಿಲ್ಲಾ ಒಕ್ಕೂಟಕ್ಕೆ ಅಧ್ಯಕ್ಷರಾಗಬೇಕು. ಅಧ್ಯಕ್ಷರಾದವರು ಮಹಾಮಂಡಳಿಗೆ ನಿರ್ದೇಶಕರಾಗಬೇಕೆನ್ನುವ ಹೊಸ ಕಾಯ್ದೆಯನ್ನು ಜಾರಿಗೆ ತರಲಾಗಿದೆ.

ಈ ಹೊಸ ಕಾಯ್ದೆಯು ವಿಧಾನ ಪರಿಷತ್ತಿನಲ್ಲಿ ಸೋಲಾಗಿದ್ದು, ವಿಧಾನ ಸಭೆಯಲ್ಲಿ ಅಂಗೀಕಾರವಾಗಿದೆ. ಮುಂದಿನ ಮೂರ್ನಾಲ್ಕು ತಿಂಗಳಲ್ಲಿ ಸಹಕಾರಿ ಇಲಾಖೆಯ ಹೊಸ ನಿಯಮ ಜಾರಿಯಾಗುವುದರಿಂದ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟಕ್ಕೆ ಅಧ್ಯಕ್ಷರಾಗಬೇಕಾಯಿತು ಎಂದು ಅಧ್ಯಕ್ಷ ಸ್ಥಾನದ  ಗುಟ್ಟನ್ನು ಬಾಲಚಂದ್ರ ಜಾರಕಿಹೊಳಿ ಅವರು ಬಹಿರಂಗ ಪಡಿಸಿದರು.

- Advertisement -

ಹಿಂದಿನ ಅವಧಿಯ ಅಧ್ಯಕ್ಷರಾಗಿ ವಿವೇಕರಾವ್ ಪಾಟೀಲ ಅವರು ಉತ್ತಮವಾಗಿ ಕಾರ್ಯನಿರ್ವಹಿಸಿದ್ದಾರೆ. ಆದರೆ ಕಹಾಮ ಆಡಳಿತ ಮಂಡಳಿಯ ಚುಕ್ಕಾಣಿಯನ್ನು ಮತ್ತೊಮ್ಮೆ ಹಿಡಿಯಬೇಕಾಗಿರುವುದರಿಂದ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಬೇಕಾಯಿತು. ಮುಂದಿನ ದಿನಗಳಲ್ಲಿ ಯಾವುದೇ 

ಗೊಂದಲಗಳು ನಡೆಯಬಾರದು. ಈ ಹಿನ್ನೆಲೆಯಲ್ಲಿ ವಿವೇಕರಾವ್ ಅವರೊಂದಿಗೆ ಚರ್ಚಿಸಿ ಅಂತಿಮ ನಿರ್ಣಯ ಮಾಡಲಾಯಿತು. ಹೀಗಾಗಿಯೇ ಅಧ್ಯಕ್ಷರಾಗಲು ಒಪ್ಪಿಕೊಂಡಿರುವುದಾಗಿ ಅವರು ಹೇಳಿದರು.

ಬೆಳಗಾವಿ ಹಾಲು ಒಕ್ಕೂಟದ ಅಭಿವೃದ್ಧಿಗೆ ಎಲ್ಲರೂ ಒಂದಾಗಿ- ಒಗ್ಗಟ್ಟಾಗಿ ದುಡಿಯೋಣ. ಪಕ್ಷಾತೀತವಾಗಿ ಕೆಲಸವನ್ನು ಮಾಡೋಣ. ಜಿಲ್ಲಾ ಹಾಲು ಒಕ್ಕೂಟಕ್ಕೆ ರೈತರ ಸಹಕಾರ ಅಗತ್ಯವಾಗಿದೆ. ರಾಯಬಾಗ, ಗೋಕಾಕ, ಮೂಡಲಗಿ ತಾಲೂಕಿನ ರೈತರು ಹೆಚ್ಚಿನ ಪ್ರಮಾಣದಲ್ಲಿ ಹಾಲನ್ನು ಪೂರೈಸುತ್ತಿದ್ದಾರೆ. ಆದರೆ, ನಿಪ್ಪಾಣಿ, ಕಾಗವಾಡ, ಚಿಕ್ಕೋಡಿ, ಅಥಣಿ ತಾಲೂಕಿನ ರೈತರು ಮಾತ್ರ ನೆರೆಯ ಮಹಾರಾಷ್ಟ್ರಕ್ಕೆ ಹಾಲನ್ನು ಪೂರೈಕೆ ಮಾಡುತ್ತಿದ್ದಾರೆ. ಬೈಲಹೊಂಗಲ ರೈತರು ಕಡಿಮೆ ಪ್ರಮಾಣದಲ್ಲಿ ಹಾಲನ್ನು ಪೂರೈಸುತ್ತಿದ್ದಾರೆ. ಇದಕ್ಕೆ ಕಾರಣ ರೈತರು ಹೈನುಗಾರಿಕೆಗೆ ಅಷ್ಟಾಗಿ ಒತ್ತು ಕೊಡುತ್ತಿಲ್ಲ. ನೀರಿನ ಸಮಸ್ಯೆಯನ್ನು ಮುಂದೆ ಮಾಡುತ್ತಿದ್ದಾರೆ. ಕೋಲಾರ ಜಿಲ್ಲೆಯಲ್ಲಿ ನೀರಿನ ಅಭಾವ ಕಂಡು ಬಂದರೂ ಅಲ್ಲಿನ‌ ರೈತರು ಹೈನುಗಾರಿಕೆಗೆ ಆದ್ಯತೆ ನೀಡುತ್ತಿದ್ದಾರೆ. ನಮ್ಮ ಉತ್ತರ ಕರ್ನಾಟಕದ ಭಾಗದಲ್ಲಿಯೂ ರೈತರು ಇಂತಹ ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳುವ ಮೂಲಕ ಹೈನುಗಾರಿಕೆ ವೃದ್ಧಿಯಾದರೆ ಇಡೀ ರೈತರ ಬದುಕು ಹಸನಾಗಲು ಸಾಧ್ಯವಾಗುತ್ತದೆ. ಈ ದಿಸೆಯಲ್ಲಿ  ಹೈನು ಕ್ರಾಂತಿಯಾಗಬೇಕಿದೆ. ನಮ್ಮ ಜಿಲ್ಲೆಯಿಂದ ಪಕ್ಕದ ಮಹಾರಾಷ್ಟ್ರಕ್ಕೆ ಹೋಗುತ್ತಿರುವ ೧೫ ಲಕ್ಷ ಲೀ. ಹಾಲನ್ನು ನಮ್ಮಲ್ಲಿಯೇ ಉಳಿಸಿಕೊಳ್ಳಬೇಕಾಗಿದೆ.

ಜಿಲ್ಲಾ ಸಹಕಾರಿ ಹಾಲು ಒಕ್ಕೂಟದ ಪ್ರಗತಿಗಾಗಿ ಆಡಳಿತ ಮಂಡಳಿಯ ಸದಸ್ಯರು, ಹೈನಗಾರರು ಮತ್ತು ಸಿಬ್ಬಂದಿಗಳು ಒಗ್ಗಟ್ಟಾಗಿ ಶ್ರಮಿಸಿದರೇ ಖಂಡಿತವಾಗಿಯೂ ನಮ್ಮ ಒಕ್ಕೂಟಗಳು ಆರ್ಥಿಕವಾಗಿ ಬೆಳೆಯಲು ಸಾಧ್ಯವಾಗುತ್ತವೆ ಎಂದು ಅವರು ತಿಳಿಸಿದರು. 

ಮುಂದಿನ ದಿನಗಳಲ್ಲಿ ಹಾಲು ಶೇಖರಣೆಯನ್ನು ದಿನಂಪ್ರತಿ ೩ ಲಕ್ಷ ಲೀ. ಗೆ ಹೆಚ್ಚಿಸಲು ಗುರಿಯನ್ನು ಹಾಕಿಕೊಳ್ಳಲಾಗಿದೆ. ೨ ಲಕ್ಷ ಲೀ. ಹಾಲನ್ನು ಒಕ್ಕೂಟದ ವ್ಯಾಪ್ತಿಯ 

ಮಾರುಕಟ್ಟೆಯಲ್ಲಿ ಮಾರಾಟ ಕೈಗೊಳ್ಳಲು ಗುರಿ ಇಟ್ಟುಕೊಳ್ಳಲಾಗಿದೆ. ಹಾಲು ಮತ್ತು ಹಾಲಿನ ಉತ್ಪನ್ನಗಳನ್ನು ಸಂಸ್ಕರಿಸಿ ತಯಾರಿಸಲು ಹೊಸ ತಂತ್ರಜ್ಞಾನವುಳ್ಳ ಸಂಪೂರ್ಣ ಸ್ವಯಂಚಾಲಿತ ಮೇಡೈರಿಯನ್ನು ಸುಮಾರು ೨೫೦ ಕೋ. ರೂ ವೆಚ್ಚದಲ್ಲಿ ಸ್ಥಾಪಿಸಲು ಉದ್ದೇಶಿಸಲಾಗಿದೆ. ಹೈನಗಾರ ರೈತರಿಗೆ ಮುಂದಿನ ದಿನಗಳಲ್ಲಿ ಸಮರ್ಪಕವಾಗಿ ಬಿಲ್ ಪಾವತಿ ಮಾಡಲು ಅಗತ್ಯವಾದ ಕ್ರಮಗಳನ್ನು ಕೈಗೊಳ್ಳುವುದಾಗಿ  ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಮುಂದಿರುವ ಗುರಿಗಳ ಬಗ್ಗೆ ಮಾಹಿತಿ ನೀಡಿದರು. 

ವಿವೇಕರಾವ್ ಪಾಟೀಲ ಅವರು ನೂತನ ಅಧ್ಯಕ್ಷರನ್ನು ಅಭಿನಂದಿಸಿ ಮಾತನಾಡಿದರು.

ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ ಸಂಘಗಳ ಒಕ್ಕೂಟದ ನಿರ್ದೇಶಕರಾದ ಬಾಬು ಕಟ್ಟಿ, ಮಲ್ಲಪ್ಪ ಪಾಟೀಲ, ಕಲ್ಲಪ್ಪ ಗಿರೆನ್ನವರ, ಡಾ. ಬಸವರಾಜ ಪರನ್ನವರ, ಬಾಬುರಾವ ವಾಘಮೋಡೆ, ವೀರುಪಾಕ್ಷಿ ಈಟಿ, ರಾಯಪ್ಪ ಡೂಗ, ಪ್ರಕಾಶ ಅಂಬೋಜಿ, ಸಂಜಯ ಶಿಂತ್ರಿ, ಸತ್ತೆಪ್ಪ ವಾರಿ, ಶಂಕರ್ ಸಿದ್ನಾಳ, ಮಹಾದೇವ ಬಿಳಿಕುರಿ, ರಮೇಶ್ ಅಣ್ಣಿಗೇರಿ, ಸವಿತಾ ಖಾನಪ್ಪಗೋಳ, ವ್ಯವಸ್ಥಾಪಕ ನಿರ್ದೇಶಕ ಎಂ. ಕೃಷ್ಣಪ್ಪ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

ರಾಣಿ ಚೆನ್ನಮ್ಮ ವಿವಿ ರಿಜಿಸ್ಟರ್ ರಾಜಶ್ರೀ ಜೈನಾಪುರ ಅವರು ರಿಟರ್ನಿಂಗ್ ಅಧಿಕಾರಿಯಾಗಿ ಕಾರ್ಯ ನಿರ್ವಹಿಸಿದರು.

- Advertisement -
- Advertisement -

Latest News

ಸಿಂದಗಿ ಅಧ್ಯಕ್ಷರಾಗಿ ಶಾಂತವೀರ, ಉಪಾಧ್ಯಕ್ಷರಾಗಿ ರಾಜಣ್ಣಿ ಆಯ್ಕೆ

ಸಿಂದಗಿ; ಪಟ್ಟಣದ ಪುರಸಭೆಯ ಅಧ್ಯಕ್ಷ, ಉಪಾದ್ಯಕ್ಷರ ಅವಧಿ ಮುಗಿದು ಹಲವು ವರ್ಷಗಳು ಕಳೆದಿತ್ತು ಅದು ಅ. ೨೮ ರಂದು ಚುನಾವಣೆ ಪ್ರಕ್ರಿಯೆ ಪ್ರಾರಂಭಿಸಿ ಸೆ.೯ ದಿನಾಂಕ...
- Advertisement -

More Articles Like This

- Advertisement -
close
error: Content is protected !!
Join WhatsApp Group