ಕುಡಿಯುವ ನೀರಿನ ಸಮಸ್ಯೆಯನ್ನು ಸಮರ್ಥವಾಗಿ ಎದುರಿಸಲು ಸನ್ನದ್ಧರಾಗಿ- ಬಾಲಚಂದ್ರ ಜಾರಕಿಹೊಳಿ

Must Read

ಗೋಕಾಕ- ಮೂಡಲಗಿ ತಾಲ್ಲೂಕು ಮಟ್ಟದ ಅಧಿಕಾರಿಗಳ ಸಭೆ ನಡೆಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ

ಗೋಕಾಕ; ಬೇಸಿಗೆಯಲ್ಲಿ ಗ್ರಾಮೀಣ ಭಾಗದಲ್ಲಿ ಕುಡಿಯುವ ನೀರಿನ ತೊಂದರೆಯಾಗದಂತೆ ಈಗೀನಿಂದಲೇ ಅಗತ್ಯ ಕ್ರಮಗಳನ್ನು ಕೈಕೊಳ್ಳುವಂತೆ ಅರಭಾವಿ ಶಾಸಕ ಮತ್ತು ಬೆಮ್ಯುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಇಲ್ಲಿಯ ಎನ್‌ಎಸ್‌ಎಫ್ ಕಚೇರಿಯಲ್ಲಿ ಶುಕ್ರವಾರದಂದು ಜರುಗಿದ ಮೂಡಲಗಿ ಮತ್ತು ಗೋಕಾಕ ತಾಲ್ಲೂಕು ಮಟ್ಟದ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ನಾಳೆಯ ಮಾರ್ಚ ತಿಂಗಳಿನಿ೦ದ ಬೇಸಿಗೆಯು ಆರಂಭವಾಗಲಿದ್ದು, ಜನ ಹಾಗೂ ಜಾನುವಾರುಗಳಿಗೆ ಕುಡಿಯುವ ನೀರಿನ ಸಮಸ್ಯೆ ಎದುರಾಗದಂತೆ ಕ್ರಮಗಳನ್ನು ಕೈಕೊಳ್ಳಲು ತಾಲ್ಲೂಕಾಡಳಿತವು ಮುತುವರ್ಜಿ ವಹಿಸುವಂತೆ ಸೂಚಿಸಿದರು.

ಮಾರ್ಚ ತಿಂಗಳಿನಿಂದ ಮುಂದಿನ ಮೂರು ತಿಂಗಳು ಕಾಲ ಬೇಸಿಗೆಯು ಬರಲಿದ್ದು, ಅಂಥ ಸಂದರ್ಭದಲ್ಲಿ ಅಧಿಕಾರಿಗಳು ಜನರು ಮತ್ತು ಜಾನುವಾರುಗಳಿಗೆ ಕುಡಿಯುವ ನೀರಿನ ಸಮಸ್ಯೆಯಾಗದಂತೆ ಕೆಲಸ ನಿರ್ವಹಿಸಬೇಕು. ಅವಶ್ಯವಿದ್ದಲ್ಲಿ ಟ್ಯಾಂಕರ್ ಮೂಲಕವೂ ನೀರು ಸರಬರಾಜು ಮಾಡಲು ಅಗತ್ಯವಿರುವ ಎಲ್ಲ ಕ್ರಮಗಳನ್ನು ಕೈಕೊಳ್ಳಲು ಅವರು ಸೂಚನೆ ನೀಡಿದರು.

ಜೆಜೆಎಂ ಕಾಮಗಾರಿಗಳನ್ನು ಕೂಡಲೇ ಪೂರ್ಣಗೊಳಿಸಬೇಕು. ಈ ಯೋಜನೆಯ ಕಾಮಗಾರಿಗಳು ಪೈಪ್ ಲೈನ್ ಮತ್ತು ಓಎಚ್ಟಿ ನಿರ್ಮಾಣ ಮಾಡಿದ್ದು, ಸಾರ್ವಜನಿಕರಿಗೆ ಇದುವರೆಗೂ ಮನೆಗಳಿಗೆ ಸರಬುರಾಜು ಆಗಿಲ್ಲ. ಕೂಡಲೇ ಈ ಬಗ್ಗೆ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳಬೇಕು. ಈ ಕಾಮಗಾರಿಗಳಿಂದ ಆಯಾ ಗ್ರಾಮಗಳ ರಸ್ತೆಗಳು ಸಹ ಹದಗೆಟ್ಟಿದ್ದು, ಇವುಗಳನ್ನು ದುರಸ್ತಿ ಕಾರ್ಯ ಮಾಡಬೇಕು. ಲೋಕೋಪಯೋಗಿ ಇಲಾಖೆಯ ಎಲ್ಲ ಕಾಮಗಾರಿಗಳನ್ನು ತುರ್ತಾಗಿ ಗುಣಮಟ್ಟದಿಂದ ಕೈಗೆತ್ತಿಕೊಳ್ಳಬೇಕು. ಕಾಮಗಾರಿಗಳ ಸ್ಥಳಕ್ಕೆ ಸ್ವತಃ ಅಧಿಕಾರಿಗಳೇ ಭೇಟಿ ನೀಡಬೇಕು. ಅಪೂರ್ಣಗೊಂಡ ಕಾಮಗಾರಿಗಳನ್ನು ನವ್ಹೆಂಬರ್- ಡಿಸೆಂಬರ್ ತಿಂಗಳೊಳಗೆ ಪೂರ್ಣಗೊಳಿಸುವಂತೆ ಅವರು ಅಧಿಕಾರಿಗಳಿಗೆ ತಾಕೀತು ಮಾಡಿದರು.

ಅಮೃತ ೨.೦ ಯೋಜನೆಯಡಿ ಅರಭಾವಿ, ಕಲ್ಲೋಳಿ, ನಾಗನೂರ, ಮೂಡಲಗಿ ಪಟ್ಟಣಗಳಿಗೆ ೧೪೦.೬೯ ಕೋಟಿ ರೂಪಾಯಿಗಳ ಅನುದಾನ ಬಿಡುಗಡೆಯಾಗಿದ್ದು, ಈಗಾಗಲೇ ಕಾಮಗಾರಿಗೆ ಚಾಲನೆಯನ್ನು ನೀಡಲಾಗಿದೆ. ಮುಂದಿನ ಒಂದು ವರ್ಷದೊಳಗೆ ಇದು ಪೂರ್ಣಗೊಳ್ಳಲಿದೆ. ಇದರಿಂದ ಈ ಪಟ್ಟಣಗಳ ಜನರ ಕುಡಿಯುವ ನೀರಿನ ಸಮಸ್ಯೆಯು ಇತ್ಯರ್ಥವಾಗಲಿದೆ. ಗುಣಮಟ್ಟದ ಕಾಮಗಾರಿ ಬಗ್ಗೆ ಅಧಿಕಾರಿಗಳು ನೀಗಾ ವಹಿಸುವಂತೆ ಸೂಚಿಸಿದ ಅವರು, ಸುಮಾರು ೧೩೫೦ ಮನೆಗಳು ಮಂಜೂರಾಗಿದ್ದು, ಅರ್ಹ ಬಡ ಕುಟುಂಬಗಳನ್ನು ಗುರುತಿಸಿ ಫಲಾನುಭವಿಗಳನ್ನು ಆಯ್ಕೆ ಮಾಡಬೇಕು. ಬಡ ಕುಟುಂಬಗಳಿಗೆ ಅನ್ಯಾಯ ಆದರೆ ಯಾವುದೇ ಕಾರಣಕ್ಕೂ ಸಹಿಸುವುದಿಲ್ಲ ಎಂದು ಅವರು ಗುಡುಗಿದರು.

ಮೆಳವಂಕಿ ಗ್ರಾಮದಲ್ಲಿ ಇತ್ತೀಚೆಗೆ ಆಹಾರ ವಿಷ ಪೂರಿತವಾಗಿ ಕೆಲವು ಜನರು ಅಸ್ತವ್ಯಸ್ತಗೊಂಡಿದ್ದು, ಸ್ಥಳಕ್ಕೆ ಯಾವೊಬ್ಬ ಅಧಿಕಾರಿಗಳು ಗ್ರಾಮಕ್ಕೆ ಭೇಟಿ ನೀಡಿಲ್ಲ. ಸ್ಥಳೀಯ ಸರ್ಕಾರಿ ಆಸ್ಪತ್ರೆಯ ವೈದ್ಯಾಧಿಕಾರಿ ಆಸ್ಪತ್ರೆಯಲ್ಲಿಯೇ ಇರುವುದಿಲ್ಲವೆಂಬ ವ್ಯಾಪಕ ದೂರುಗಳು ಗ್ರಾಮಸ್ಥರಿಂದ ಬರುತ್ತಿದ್ದು, ಅಂತಹ ವೈದ್ಯಾಧಿಕಾರಿ ಮೇಲೆ ಸೂಕ್ತ ಕ್ರಮ ಕೈಕೊಳ್ಳಬೇಕು. ಬೇಸಿಗೆಯ ಸಮಯದಲ್ಲಿಯೂ ಕೆಲ ಸಾಂಕ್ರಾಮಿಕ ರೋಗಗಳು ಬರದಂತೆ ಕಟ್ಟುನಿಟ್ಟಿನ ಕ್ರಮಗಳನ್ನು ತೆಗೆದುಕೊಳ್ಳಬೇಕು. ಕೌಜಲಗಿ ಪ್ರಾಥಮಿಕ ಆರೋಗ್ಯ ಕೇಂದ್ರವನ್ನು ಬಿಲಕುಂದಿಗೆ ಸ್ಥಳಾಂತರ ಮಾಡುವಂತೆಯೂ ಅವರು ಸೂಚಿಸಿದರು.

೨೦ ಕೆರೆಗಳಿಗೆ ನೀರು ತುಂಬಿಸುವ ಯೋಜನೆಯನ್ನು ಕೂಡಲೇ ಆರಂಭಿಸಬೇಕು. ಲಕ್ಷ್ಮೇಶ್ವರ ಮತ್ತು ಹೊನಕುಪ್ಪಿ ಗ್ರಾಮಗಳ ರೈತರಿಗೆ ಹಿಡಕಲ್ ಜಲಾಶಯದಿಂದ ನೀರು ಹೋಗುತ್ತಿಲ್ಲ. ಈ ಬಗ್ಗೆ ಅಧಿಕಾರಿಗಳು ಎಚ್ಚೆತ್ತುಕೊಂಡು ರೈತರ ಜಮೀನುಗಳಿಗೆ ನೀರು ಹಾಯಿಸಲು ಯೋಜನೆಯನ್ನು ರೂಪಿಸಬೇಕು ಎಂದು ಅವರು ಹೇಳಿದರು.

ಮಾರ್ಚ ತಿಂಗಳಲ್ಲಿ ವಿದ್ಯಾರ್ಥಿಗಳ ವಾರ್ಷಿಕ ಪರೀಕ್ಷೆಗಳು ಪ್ರಾರಂಭವಾಗಲಿದ್ದು, ಸರಿಯಾದ ಸಮಯಕ್ಕೆ ಸಾರಿಗೆ ಸೌಲಭ್ಯ ಕಲ್ಪಿಸಬೇಕು ಮತ್ತು ಅಭ್ಯಾಸಕ್ಕೆ ಅಡಚನೆಯಾಗದಂತೆ ಸಮರ್ಪಕ ವಿದ್ಯುತ್ ಪೂರೈಕೆ ಮಾಡುವಂತಾಗಬೇಕು. ಅಕ್ರಮ ಮದ್ಯ ಮಾರಾಟಕ್ಕೆ ಕಡಿವಾಣ ಹಾಕಿ ಮುಂದಿನ ಅನಾಹುತವನ್ನು ತಡೆಯುವಂತೆ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಸಂಬಂಧಿಸಿದ
ಅಧಿಕಾರಿಗಳಿಗೆ ಖಡಕ್ ಸೂಚನೆಯನ್ನು ನೀಡಿದರು.

ಗೋಕಾಕ ತಹಶೀಲ್ದಾರ ಡಾ. ಮೋಹನ ಭಸ್ಮೆ, ಮೂಡಲಗಿ ತಹಶೀಲ್ದಾರ ಶಿವಾನಂದ ಬಬಲಿ, ಗೋಕಾಕ ತಾ,ಪಂ. ಇಓ ಪರಶುರಾಮ ಗಸ್ತಿ, ಮೂಡಲಗಿ ತಾ. ಪಂ. ಇಓ ಎಫ್.ಜಿ. ಚಿನ್ನನ್ನವರ, ಮೂಡಲಗಿ ಸಿಪಿಐ ಶ್ರೀಶೈಲ ಬ್ಯಾಕೂಡ, ಘಟಪ್ರಭಾ ಸಿಪಿಐ ಎಚ್.ಡಿ.ಮುಲ್ಲಾ ಸೇರಿದಂತೆ ತಾಲ್ಲೂಕಾ ಮಟ್ಟದ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

Latest News

ಅನ್ನದಾನೇಶ್ವರ ಶ್ರೀಗಳು ಪಂಚಭೂತಗಳಲ್ಲಿ ಲೀನ

ಶ್ರೀಶೈಲ ಜಗದ್ಗುರುಗಳು, ನಾಡಿನ ಹರಗುರು ಚರಮೂರ್ತಿಗಳು ಭಕ್ತರು ಭಾಗಿಮೂಡಲಗಿ - ರಬಕವಿ ಬನಹಟ್ಟಿ ತಾಲೂಕಿನ ಬಂಡಿಗಣಿ ಗ್ರಾಮದ ಶ್ರೀ ಬಸವ ಗೋಪಾಲ ನೀಲಮಾಣಿಕ ಮಠದ ಶ್ರೀ...

More Articles Like This

error: Content is protected !!
Join WhatsApp Group