ಮೂಡಲಗಿ: ಇದೇ ಮೊದಲ ಬಾರಿಗೆ ಕೇಂದ್ರ ಸಶಸ್ತ್ರ ಮೀಸಲು ಪಡೆಗಳಲ್ಲಿನ ಕಾನ್‍ಸ್ಟೇಬಲ್ ನೇಮಕಾತಿ ಪರೀಕ್ಷೆಯನ್ನು ಕನ್ನಡ ಭಾಷೆ ಸೇರಿದಂತೆ 13 ಸ್ಥಳೀಯ ಭಾಷೆಗಳಲ್ಲಿ ಬರೆಯಲು ಅವಕಾಶ ಕಲ್ಪಿಸಿರುವ ಕೇಂದ್ರ ಸರ್ಕಾರದ ಐತಿಹಾಸಿಕ ನಿರ್ಧಾರವನ್ನು ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಅವರು ಸ್ವಾಗತಿಸಿದ್ದಾರೆ.
ಸೋಮವಾರ ಫೆ-12 ರಂದು ಪತ್ರಿಕಾ ಹೇಳಿಕೆ ನೀಡಿದ ಅವರು ಕೇಂದ್ರ ಗೃಹ ಸಚಿವಾಲಯದ ಅಧಿಕೃತ ಘೋಷಣೆಯಿಂದ ಕೇಂದ್ರ ಸಶಸ್ತ್ರ ಮೀಸಲು ಪಡೆಗಳಾದ ಸಿ.ಆರ್.ಪಿ.ಎಫ್, ಬಿ.ಎಸ್.ಎಫ್, ಸಿ.ಐ.ಎಸ್.ಎಫ್ ನ ಕಾನ್ಸ್ ಟೇಬಲ್ ಹುದ್ದೆ ನೇಮಕಾತಿ ಪರಿಕ್ಷೆ ಬರೆಯಲಿರುವ 48 ಲಕ್ಷ ಅಭ್ಯರ್ಥಿಗಳಿಗೆ ಅನುಕೂಲವಾಗಲಿದೆ ಮತ್ತು ಪ್ರಾದೇಶಿಕ ಭಾಷೆಗಳಿಗೆ ಪ್ರೋತ್ಸಾಹ ನೀಡಿದಂತಾಗುತ್ತದೆ ಎಂದರು.
ಈ ಮಹತ್ವದ ನಿರ್ಧಾರ ಆಕಾಂಕ್ಷಿತ ನಿರುದ್ಯೋಗಿ ಯುವಕರಲ್ಲಿ ಆತ್ಮವಿಶ್ವಾಸ ಹೆಚ್ಚಿಸಿ, ಉತ್ತಮ ಭವಿಷ್ಯ ರೂಪಿಸಿಕೊಳ್ಳಲು ಸಹಕಾರಿಯಾಗಿದ್ದು, ಕನ್ನಡದಲ್ಲೂ ಪರೀಕ್ಷೆ ಬರೆಯಲು ಅವಕಾಶ ನೀಡಿರುವುದರಿಂದ ಗ್ರಾಮೀಣ ಪ್ರದೇಶದ ಯುವಕರಿಗೆ ಹೆಚ್ಚಿನ ಉದ್ಯೋಗವಕಾಶ ಲಭಿಸಲಿದೆ. ಈ ಐತಿಹಾಸಿಕ ನಿರ್ಧಾರ ಕೈಗೊಂಡ ಪ್ರಧಾನಿ ನರೇಂದ್ರ ಮೋದಿ ಹಾಗೂ ಗೃಹ ಸಚಿವ ಅಮಿತ ಶಾ ಅವರಿಗೆ ರಾಜ್ಯದ ಜನತೆಯ ಪರವಾಗಿ ಧನ್ಯವಾದಗಳನ್ನು ತಿಳಿಸಿದ್ದಾರೆ.