ಬೆಳಗಾವಿ: ನಗರದ ಕೇಂದ್ರ ಗ್ರಂಥಾಲಯದಲ್ಲಿ ನ.26 ರಂದು ಸಂವಿಧಾನ ದಿನ ಆಚರಣೆ ಮಾಡಲಾಯಿತು.ಸಂವಿಧಾನ ಶಿಲ್ಪಿ ಡಾ.ಬಾಬಾಸಾಹೇಬ ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಲಾಯಿತು. ಉಪನಿರ್ದೇಶಕರಾದ ರಾಮಯ್ಯ ಅವರ ಮಾರ್ಗದರ್ಶನದಲ್ಲಿ,ನಗರ/ಜಿಲ್ಲಾ ಕೇಂದ್ರ ಗ್ರಂಥಾಲಯದ ಎಲ್ಲಾ ಸಿಬ್ಬಂದಿ ವರ್ಗ ಮತ್ತು ಸಾರ್ವಜನಿಕ ಓದುಗರಿಗೆ ಪ್ರತಿಜ್ಞಾ ವಿಧಿ ಬೋಧಿಸಲಾಯಿತು.
ಪ್ರತಿ ವರ್ಷ ನವೆಂಬರ್ 26 ರಂದು ಭಾರತದ “ಸಂವಿಧಾನ ದಿನ” ವನ್ನಾಗಿ ಆಚರಣೆ ಮಾಡಲಾಗುತ್ತದೆ. ನವೆಂಬರ್ 26, ಸ್ವತಂತ್ರ ಭಾರತದ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮಹತ್ವದ ದಿನವಾಗಿದೆ.1949ರ ನವೆಂಬರ್ 26 ರಂದು, ಸಂವಿಧಾನವನ್ನು ಅಳವಡಿಸಿಕೊಳ್ಳಲಾಯಿತು.ನಮ್ಮ ಸಂವಿಧಾನ ದೇಶದ ಜನರನ್ನು ಸಶಕ್ತಗೊಳಿಸಿದೆ. ಸರ್ವರಿಗೂ ಸಮಾನತೆ ಒದಗಿಸಿದೆ. ಮೂಲಭೂತ ಹಕ್ಕುಗಳು, ಕರ್ತವ್ಯಗಳನ್ನು ನೀಡಿದೆ.
ಭಾರತದ ಪ್ರತಿಯೊಬ್ಬ ನಾಗರಿಕನಿಗೂ ಸಂವಿಧಾನವೇ ದೊಡ್ಡ ಬಲ. ನಮ್ಮ ಸಂವಿಧಾನವು ನಮ್ಮೆಲ್ಲರನ್ನು ರಕ್ಷಿಸುವ ಬಹುದೊಡ್ಡ ಕಾನೂನು. ಈ ಸಂದರ್ಭದಲ್ಲಿ ಸಂವಿಧಾನ ಶಿಲ್ಪಿ ಡಾ.ಬಾಬಾಸಾಹೇಬ ಅಂಬೇಡ್ಕರ್ ಅವರನ್ನು ನಾವೆಲ್ಲಾ ಸ್ಮರಿಸಿಕೊಳ್ಳಲೇಬೇಕು. ಅವರ ಶ್ರೇಷ್ಠ ಜ್ಞಾನ, ದೂರದೃಷ್ಟಿ ಇವೆಲ್ಲವುಗಳ ಸಂಗಮವೇ ಇದು.ಸಂವಿಧಾನದ ಮೌಲ್ಯಗಳನ್ನು ನಾವೆಲ್ಲರೂ ಪಾಲಿಸೋಣ ಎಂದು ಪ್ರತಿಜ್ಞೆ ಸ್ವೀಕರಿಸಲಾಯಿತು.
ಈ ಸಂದರ್ಭದಲ್ಲಿ ಡಾ.ಅಂಬೇಡ್ಕರ್ ಅವರ ಜೀವನ, ಸಾಧನೆಯ ಕುರಿತು ಮತ್ತು ಸಂವಿಧಾನ ಕುರಿತ ಪುಸ್ತಕಗಳ ಪ್ರದರ್ಶನ ಏರ್ಪಡಿಸಲಾಗಿತ್ತು. ಕಾರ್ಯಕ್ರಮದಲ್ಲಿ ನಗರ/ಜಿಲ್ಲಾ ಕೇಂದ್ರ ಗ್ರಂಥಾಲಯ ಬೆಳಗಾವಿಯ ಎಲ್ಲಾ ಸಿಬ್ಬಂದಿ ಮತ್ತು ಸಾರ್ವಜನಿಕರು ಹಾಜರಿದ್ದರು.