ಸಿಂದಗಿ– ಭಾರತದ ಸಂವಿಧಾನ ಜನರನ್ನು ಸಶಕ್ತಗೊಳಿಸಿದೆ. ಸರ್ವರಿಗೂ ಸಮಾನತೆ ಒದಗಿಸಿದೆ. ಭಾರತದ ಸಂವಿಧಾನ ಜಗತ್ತಿಗೆ ಮಾದರಿಯಾದ ಸಂವಿಧಾನವಾಗಿದೆ ಎಂದು ತಾಲೂಕಾ ಶಿಕ್ಷಣ ಪ್ರಸಾರಕ ಮಂಡಳಿಯ ಅಧ್ಯಕ್ಷ ಅಶೋಕ ಮನಗೂಳಿ ಹೇಳಿದರು.
ಪಟ್ಟಣದ ಎಚ್.ಜಿ.ಪದವಿ ಪೂರ್ವ ಕಾಲೇಜಿನ ಆವರಣದಲ್ಲಿ ತಾಲೂಕಾ ಶಿಕ್ಷಣ ಪ್ರಸಾರಕ ಮಂಡಳಿಯ ವಿವಿಧ ಅಂಗ ಸಂಸ್ಥೆಗಳು ಗುರುವಾರ ಹಮ್ಮಿಕೊಂಡಿರುವ 74 ನೇ ಗಣರಾಜ್ಯೋತ್ಸವದಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು.
ಸಂಸ್ಥೆಯ ನಿರ್ದೇಶಕ ಶಿವಪ್ಪಗೌಡ ಬಿರಾದಾರ ಮಾತನಾಡಿ, ವಿದ್ಯಾರ್ಥಿಗಳಲ್ಲಿ ರಾಷ್ಟ್ರದ ಮೇಲಿರುವ ಭಕ್ತಿ, ಪ್ರೀತಿ ಕಡಿಮೆಯಾಗುತ್ತಿದೆ. ಶಿಕ್ಷಕ ಬಳಗ ಮಕ್ಕಳಲ್ಲಿ ರಾಷ್ಟ್ರದ ಬಗ್ಗೆ ಜಾಗೃತಿ ಮೂಡಿಸುವ ಕಾರ್ಯ ಮಾಡಬೇಕು ಎಂದರು.
ಈ ಸಂದರ್ಭದಲ್ಲಿ ಕಾಲೇಜಿನ ವಿದ್ಯಾರ್ಥಿ ಟರ್ಕಿ ದೇಶ ಆಯೋಜಿಸಿರುವ ಅಂತಾರಾಷ್ಟ್ರೀಯ ಕುಸ್ತಿ ಪಂದ್ಯಾವಳಿಯಲ್ಲಿ ಭಾಗವಹಿಸಿ ವಿಜೇತರಾದ ರವಿ ರೆಬಿನಾಳ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.
ರವಿ ಅವರಿಗೆ ಸಂಸ್ಥೆಯ ವತಿಯಿಂದ ರೂ. 25 ಸಾವಿರ ಮತ್ತು ವೈಯಕ್ತಿಕವಾಗಿ ಅಶೋಕ ಮನಗೂಳಿ ಅವರು ರೂ.11 ಸಾವಿರ ನಗದು ಬಹುಮಾನ ಘೋಷಿಸಿದರು.
ಇದೇ ವೇಳೆ ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಪ್ರಶಸ್ತಿ ಪತ್ರ ವಿತರಿಸಿದರು.
ಕಾರ್ಯಕ್ರಮದ ವೇದಿಕೆ ಮೇಲೆ ಸಂಸ್ಥೆಯ ನಿರ್ದೇಶಕರಾದ ಬಿ.ಎಸ್.ಪಾಟೀಲ ಡಂಬಳ, ಬಿ.ಜಿ ನೆಲ್ಲಗಿ, ಶಂಕರಗೌಡ ಬಿರಾದಾರ ಯಂಕಂಚಿ ವ್ಹಿ.ಎಸ್.ಪಾಟೀಲ ಕನ್ನೋಳ್ಳಿ ಹಾಗೂ ಇತರರು ಇದ್ದರು.
ಕಾರ್ಯಕ್ರಮದಲ್ಲಿ ವಿವಿಧ ಅಂಗ ಸಂಸ್ಥೆಗಳ ಮುಖ್ಯಸ್ಥರು, ಬೋಧಕ ಬೋಧಕೇತರ ಸಿಬ್ಬಂದಿಗಳು ಭಾಗವಹಿಸಿದ್ದರು. ಈ ವೇಳೆ ವಿದ್ಯಾರ್ಥಿಗಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಮೂಡಿ ಬಂದವು. ಪ್ರಾಚಾರ್ಯ ಎ.ಆರ್.ಹೆಗ್ಗಣದೊಡ್ಡಿ ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು, ಉಪನ್ಯಾಸಕ ಸಿದ್ದಲಿಂಗ ಕಿಣಗಿ ನಿರೂಪಿಸಿದರು.