ಹುನಗುಂದ: ಸಮೀಪದ ತಿಮ್ಮಾಪುರ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಸಹಶಿಕ್ಷಕಿ ಗೀತಾ ತಾರಿವಾಳ ರಸಪ್ರಶ್ನೆ ಸ್ಪರ್ಧೆಯಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ರಾಷ್ಟ್ರೀಯ ಶಿಕ್ಷಕರ ಕಲ್ಯಾಣ ಪ್ರತಿಷ್ಠಾನ, ಕರ್ನಾಟಕ ರಾಜ್ಯ ಶಿಕ್ಷಕರ ಕಲ್ಯಾಣ ನಿಧಿ, ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ಬಾಗಲಕೋಟೆ ಇವರ ಸಹಯೋಗದಲ್ಲಿ ಪ್ರಾಥಮಿಕ ಶಾಲಾ ಶಿಕ್ಷಕರಿಗಾಗಿ ನಡೆದ ಸಾಮಾನ್ಯ ಜ್ಞಾನ ರಸಪ್ರಶ್ನೆ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ವಿಜೇತ ಗೀತಾ ತಾರಿವಾಳ ಸತತ ಮೂರನೇ ಬಾರಿಗೆ ಹುನಗುಂದ ತಾಲೂಕಿನಿಂದ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾದರೂ ಇದೇ ಮೊದಲ ಬಾರಿಗೆ ರಾಜ್ಯಮಟ್ಟಕ್ಕೆ ಅರ್ಹತೆ ಪಡೆದಿದ್ದಾರೆ. ನಿರಂತರ ಅಧ್ಯಯನ ಮತ್ತು ಸತತ ಅಭ್ಯಾಸದಿಂದ ಪಠ್ಯ ಹಾಗೂ ಪಠ್ಯಕ್ಕೆ ಪೂರಕವಾದ ಜ್ಞಾನ ಗಳಿಸಲು ಸಾಧ್ಯ. ಸ್ಪರ್ಧಾತ್ಮಕ ಜಗತ್ತಿನಲ್ಲಿ ಮಕ್ಕಳಂತೆ ಶಿಕ್ಷಕರು ದಿನದಿಂದ ದಿನಕ್ಕೆ ಅಪ್ಡೇಟ್ ಆಗುತ್ತಿರಬೇಕು. ಅದಕ್ಕೆ ಇಂತಹ ಸ್ಪರ್ಧೆಗಳು ಸಹಕಾರಿಯಾಗಿವೆ ಎಂದು ಗೀತಾ ಅಭಿಪ್ರಾಯಪಟ್ಟರು.
ರಾಜ್ಯಮಟ್ಟಕ್ಕೆ ಆಯ್ಕೆಯಾಗಿ ತಾಲೂಕಿನ ಕೀರ್ತಿ ಹೆಚ್ಚಿಸಿದ ಗೀತಾ ಅವರನ್ನು ಕ್ಷೇತ್ರ ಶಿಕ್ಷಣಾಧಿಕಾರಿ ಜಾಸ್ಮಿನ್ ಕಿಲ್ಲೇದಾರ, ಕ್ಷೇತ್ರ ಸಮನ್ವಯಾಧಿಕಾರಿ ಎಸ್ ಎಸ್ ಗುಡಗುಂಟಿ ಅಭಿನಂದಿಸಿದ್ದಾರೆ.