ರಾಜ್ಯದಲ್ಲಿ ಎಸ್.ಸಿ/ಎಸ್.ಟಿ ವಸತಿ ನಿಲಯಗಳ ನಿರ್ಮಾಣಕ್ಕಾಗಿ ಕೇಂದ್ರದಿಂದ ಅನುದಾನ- ಸಂಸದ ಈರಣ್ಣ ಕಡಾಡಿ

0
267

ಮೂಡಲಗಿ: ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಇಲಾಖೆಯ ಪ್ರಧಾನ ಮಂತ್ರಿ ಅನುಸೂಚಿತ ಜಾತಿ ಅಭ್ಯುದಯ ಯೋಜನೆಯಡಿ ಕರ್ನಾಟಕ ರಾಜ್ಯದಲ್ಲಿ ಕಳೆದ 04 ವರ್ಷಗಳಲ್ಲಿ (2020-21 ರಿಂದ 2023-24) 11 ವಸತಿ ನಿಲಯಗಳನ್ನು ಮಂಜೂರು ಮಾಡಿದೆ. ಕಳೆದ 3 ವರ್ಷಗಳಲ್ಲಿ ವಸತಿ ನಿಲಯಗಳ ನಿರ್ಮಾಣಕ್ಕಾಗಿ 116 ಕೋಟಿ ರೂ.ಗಳ ಅನುದಾನ ಮಂಜೂರಾಗಿದ್ದು, ಇದರಲ್ಲಿ 92.47 ಕೋಟಿ ರೂ.ಗಳ ಅನುದಾನದ ಬಳಕೆ ಮಾಡಲಾಗಿದೆ ಎಂದು ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಇಲಾಖೆ ಖಾತೆ ರಾಜ್ಯ ಸಚಿವ ಎ. ನಾರಾಯಣಸ್ವಾಮಿ ಅವರು ಲಿಖಿತ ಉತ್ತರದಲ್ಲಿ ಮಾಹಿತಿ ನೀಡಿದ್ದಾರೆಂದು ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಹೇಳಿದರು.

ಸಂಸತ್ತಿನ ಚಳಿಗಾಲ ಅಧಿವೇಶನದಲ್ಲಿ ಕರ್ನಾಟಕ ರಾಜ್ಯದಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಇತರೆ ಹಿಂದುಳಿದ ವರ್ಗದ ವಿದ್ಯಾರ್ಥಿಗಳಿಗಾಗಿ ನಿರ್ಮಿಸಲಾದ ವಸತಿ ನಿಲಯಗಳ ನಿರ್ಮಾಣದ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರು ವಸತಿ ನಿಲಯಗಳ ನಿರ್ಮಾಣವು ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣವನ್ನು ಪಡೆಯಲು ಅನುವು ಮಾಡಿಕೊಡುವ ಮತ್ತು ಪ್ರೋತ್ಸಾಹಿಸುವ ಸಾಧನವಾಗಿದೆ. ಇಂತಹ ವಸತಿ ನಿಲಯಗಳು ಗ್ರಾಮೀಣ ಮತ್ತು ದೂರದ ಪ್ರದೇಶಗಳಿಂದ ಬಂದ ವಿದ್ಯಾರ್ಥಿಗಳಿಗೆ ಅಪಾರ ಪ್ರಯೋಜನಕಾರಿಯಾಗಿದೆ. ರಾಜ್ಯದಲ್ಲಿ  3 ಮೆಟ್ರಿಕ್ ನಂತರದ ಬಾಲಕಿಯರ ವಸತಿ ನಿಲಯಕ್ಕೆ 4.62 ಕೋಟಿ ರೂ. ಹಾಗೂ 8 ಮೆಟ್ರಿಕ್ ನಂತರದ ಬಾಲಕರ ವಸತಿ ನಿಲಯಕ್ಕೆ 9.75 ಕೋಟಿ ರೂ.ಗಳನ್ನು ಬಿಡುಗಡೆ ಮಾಡಲಾಗಿದೆ ಎಂದರು.

ಕೇಂದ್ರ ಬುಡಕಟ್ಟು ವ್ಯವಹಾರಗಳ ಸಚಿವಾಲಯದಿಂದ ಸ್ವೀಕರಿಸಿದ ಮಾಹಿತಿಯ ಪ್ರಕಾರ  ಬುಡಕಟ್ಟು ಮಕ್ಕಳಿಗೆ (6 ರಿಂದ 12 ನೇ ತರಗತಿ) ಅವರ ಸ್ವಂತ ಪರಿಸರದಲ್ಲಿ ಗುಣಮಟ್ಟದ ಶಿಕ್ಷಣವನ್ನು ಒದಗಿಸಲು ಕೇಂದ್ರ ವಲಯದ ಏಕಲವ್ಯ ಮಾದರಿ ವಸತಿ ಶಾಲೆಯನ್ನು ಜಾರಿಗೊಳಿಸಿದೆ. ಕರ್ನಾಟಕ ರಾಜ್ಯದಲ್ಲಿ ಒಟ್ಟು 12 ಕೇಂದ್ರ ವಲಯದ ಏಕಲವ್ಯ ಮಾದರಿ ವಸತಿ ಶಾಲೆಗಳು ಕಾರ್ಯನಿರ್ವಹಿಸುತ್ತಿವೆ ಕಳೆದ 3 ವರ್ಷಗಳಲ್ಲಿ ರಾಜ್ಯದಲ್ಲಿ ವಸತಿ ನಿಲಯಗಳ ನಿರ್ಮಾಣಕ್ಕಾಗಿ 5800 ಲಕ್ಷ ರೂ. ಮಂಜೂರಾಗಿದ್ದು, ಇದರಲ್ಲಿ 2300 ಲಕ್ಷ ರೂ ಅನುದಾನ ಬಿಡುಗಡೆಯಾಗಿದೆ. ಪ್ರಸಕ್ತ ಹಣಕಾಸು ವರ್ಷದಲ್ಲಿ ರಾಜ್ಯ /ಕೇಂದ್ರಾಡಳಿತಗಳಿಂದ ಒಟ್ಟು 70 ಪ್ರಸ್ತಾವನೆಗಳನ್ನು ಸ್ವೀಕರಿಸಲಾಗಿದೆ ಎಂದು ಸಚಿವರು ಉತ್ತರಿಸಿದ್ದಾರೆಂದು ಸಂಸದ ಈರಣ್ಣ ಕಡಾಡಿ ಮಾಹಿತಿ ನೀಡಿದ್ದಾರೆ.