ಬೀದರ – ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ಷಡ್ಯಂತ್ರ ನಡೆಸಿ ಸನಾತನ ಧರ್ಮದ ಅವಮಾನ ಮಾಡಲಾಗುತ್ತಿದೆಯೆಂದು ಪ್ರತಿಭಟಿಸಿ ಬೀದರ್‌ನಲ್ಲಿ ಧರ್ಮಸ್ಥಳ ಭಕ್ತಾಭಿಮಾನಿಗಳ ವೇದಿಕೆ ಹಿಂದೂಪರ ಸಂಘಟನೆಗಳಿಂದ ಪ್ರತಿಭಟನೆ ನಡೆಸಲಾಯಿತು.
ಬರೀದ್ ಶಾಹಿ ಗಾರ್ಡನ್‌ನಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಬೃಹತ್ ಪ್ರತಿಭಟನಾ ರ್ಯಾಲಿ ನಡೆಸಿ ಧರ್ಮಸ್ಥಳದ ವಿರುದ್ಧ ಷಡ್ಯಂತ್ರ ನಡೆಸುತ್ತಿರುವ ಧರ್ಮದ್ರೋಹಿಗಳಿಗೆ ಧಿಕ್ಕಾರ ಧಿಕ್ಕಾರ ಹಾಗೂ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆಯವರಿಗೆ ಜಯವಾಗಲಿ ಎಂಬ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಲಾಯಿತು.
ಧರ್ಮಸ್ಥಳದ ಮಂಜುನಾಥಸ್ವಾಮಿ ದೇವಾಲಯ ಹಾಗೂ ಹೆಗ್ಗಡೆ ಕುಟುಂಬಕ್ಕೆ ಕಳಂಕ ತರಲು ಒಳಸಂಚು ನಡೆಸಲಾಗಿದೆ. ಒಳಸಂಚು ನಡೆಸುತ್ತಿರುವವರ ವಿರುದ್ಧ ಸೂಕ್ತ ತನಿಖೆ ನಡೆಸಿ ಕ್ರಮ ಕೈಗೊಳ್ಳುವಂತೆ ಈ ಸಂದರ್ಭದಲ್ಲಿ ಒತ್ತಾಯ ಮಾಡಲಾಯಿತು.
ಜಿಲ್ಲೆಯ ವಿವಿಧ ಕಡೆಗಳಿಂದ ಆಗಮಿಸಿದ ಹಿಂದೂಪರ ಮುಖಂಡರು, ಕಾರ್ಯಕರ್ತರು, ಸಾವಿರಾರು ಮಹಿಳೆಯರು ಪ್ರತಿಭಟನೆಯಲ್ಲಿ ಭಾಗಿಯಾಗಿದ್ದರು.
ವರದಿ : ನಂದಕುಮಾರ ಕರಂಜೆ, ಬೀದರ