ಬೆಂಗಳೂರು: ಕನ್ನಡ ಸಾಹಿತ್ಯ ಪರಿಷತ್ತಿನ ಪ್ರತಿಷ್ಠಿತ ದತ್ತಿ ಪ್ರಶಸ್ತಿಗಳಲ್ಲಿ ಒಂದಾಗಿರುವ ʻಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್ ದತ್ತಿ ಪ್ರಶಸ್ತಿʼ ಪ್ರಕಟವಾಗಿದೆ.
ನಾಡಿನ ಹಿರಿಯ ರಾಜಕೀಯ ಮುತ್ಸದ್ದಿ, ದೇಶದ ಪ್ರಧಾನಿ ಪಟ್ಟಕ್ಕೆ ಏರಿದ ಮೊದಲ ಕನ್ನಡಿಗ,ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಅವರು ೨೦೨೨ನೆ ಸಾಲಿನ ʻಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್ ದತ್ತಿ ಪ್ರಶಸ್ತಿ*ʼಗೆ ಭಾಜನರಾಗಿರುತ್ತಾರೆ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ನಾಡೋಜ ಡಾ. ಮಹೇಶ ಜೋಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನಾಲ್ವಡಿಯವರು ನಾಡಿನ ಅಭ್ಯುದಯದ ಕನಸು ಕಂಡವರು. ಅವರ ಆಶಯದಂತೆ ನಾಡಿನಲ್ಲಿ ಕೈಗಾರಿಕಾ ಕ್ಷೇತ್ರ, ಕೃಷಿ, ನೀರಾವರಿ, ವಿದ್ಯುಚ್ಛಕ್ತಿ, ಹಿಂದುಳಿದ ವರ್ಗಗಳ ಕಲ್ಯಾಣ, ಸಾಮಾಜಿಕ ನ್ಯಾಯ, ಮಹಿಳಾ ಸಬಲೀಕರಣ, ಗ್ರಾಮ ನೈರ್ಮಲೀಕರಣ, ವೈದ್ಯಕೀಯ ಕ್ಷೇತ್ರ, ನೀರಿನ ಸೌಕರ್ಯ, ಸಾರಿಗೆ ಸೌಲಭ್ಯ, ವ್ಯಾಪಾರ ಸೇರಿದಂತೆ ನಾಡಿನ ಸರ್ವತೋಮುಖ ಅಭಿವೃದ್ಧಿಯಲ್ಲಿ ಗಣನೀಯ ಸಾಧನೆ ಮಾಡಿರುವ ಗಣ್ಯರೊಬ್ಬರಿಗೆ ಪ್ರತಿ ವರ್ಷ ಪ್ರಸ್ತುತ ಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್ ದತ್ತಿ ಪ್ರಶಸ್ತಿಯನ್ನು ನೀಡಬೇಕು ಎನ್ನುವ ಮೂಲ ಆಶಯ ಈ ದತ್ತಿ ಪ್ರಶಸ್ತಿಯದ್ದಾಗಿದೆ. ಪ್ರಶಸ್ತಿಯು ೫೧,೦೦೦ (ಐವತ್ತೊಂದು ಸಾವಿರ)ರೂ. ನಗದು, ಸ್ಮರಣಿಕೆ, ಫಲ ತಾಂಬೂಲಗಳನ್ನು ಒಳಗೊಂಡಿರುತ್ತದೆ ಎಂದು ಅವರು ತಿಳಿಸಿದ್ದಾರೆ.
ಇದುವರೆಗೂ ನಾಡಿನ ೧೨ ಜನ ಗಣ್ಯರಿಗೆ ಪರಿಷತ್ತಿನ ಈ ಪ್ರಶಸ್ತಿ ಪ್ರದಾನ ಮಾಡಲಾಗಿದೆ. ಈ ಬಾರಿಯ ಆಯ್ಕೆ ಸಮಿತಿಯು ಮಾಜಿ ಪ್ರಧಾನಿಯಾಗಿದ್ದ ಎಚ್.ಡಿ.ದೇವೇಗೌಡ ಅವರಿಗೆ ಈ ೨೦೨೨ನೆಯ ಸಾಲಿನ ʻಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್ ದತ್ತಿ ಪ್ರಶಸ್ತಿʼಗಾಗಿ ಆಯ್ಕೆಮಾಡಿದೆ ಎಂದು ಜೋಶಿ ತಿಳಿಸಿದ್ದಾರೆ.
ಶ್ರೀನಾಥ್ ಜೆ
ಮಾಧ್ಯಮ ಸಲಹಾಗಾರರು
ಕನ್ನಡ ಸಾಹಿತ್ಯ ಪರಿಷತ್ತು
ಬೆಂಗಳೂರು