ಗೋಕಾಕ : ವಿಧಾನಸಭೆಯಲ್ಲಿ ಮತಾಂತರ ನಿಷೇಧ ಮಸೂದೆಯನ್ನು ( ಕರ್ನಾಟಕ ಧಾರ್ಮಿಕ ಸ್ವಾತಂತ್ರ್ಯ ಹಕ್ಕು ಸಂರಕ್ಷಣಾ ಕಾಯ್ದೆ-2021) ಗುರುವಾರ ಅಂಗೀಕಾರ ಮಾಡಿದ್ದಕ್ಕೆ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಅಸಮಾಧಾನ ವ್ಯಕ್ತಪಡಿಸಿದರು.
ರಾಜ್ಯ ಹಾಗೂ ಕೇಂದ್ರ ಬಿಜೆಪಿ ಸರ್ಕಾರಗಳು ಯಾವಾಗಲೂ ತರಾತುರಿಯಲ್ಲಿ ಅಂಗೀಕಾರ ಮಾಡುತ್ತವೆ. ಬೆಳಗ್ಗೆ ಬಿಲ್ ತಂದು, ಸಂಜೆ ಪಾಸ್ ಮಾಡುತ್ತಾರೆ. ವಿಧಾನಸಭೆಯಲ್ಲಿ ಚರ್ಚೆಯಾಗಬೇಕು, ಚರ್ಚೆಯೇ ಆಗದಿರುವ ಬಿಲ್ ಪಾಸ್ ಮಾಡಿ, ಜನರ ದಾರಿ ತಪ್ಪಿಸುವ ಕೆಲಸ ಮಾಡುತ್ತಾರೆ ಎಂದು ಆರೋಪಿಸಿದರು.
ವಿರೋಧ ಪಕ್ಷದಿಂದ ಸಾಕಷ್ಟು ವಿಷಯಗಳನ್ನು ಸರ್ಕಾರದ ಗಮನಕ್ಕೆ ತರಲಾಗಿದೆ, ಆದರೆ ಅವುಗಳಿಗೆ ಪರಿಹಾರ ಸಿಕ್ಕಿಲ್ಲ. ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಅನೇಕ ಸಂಘಟನೆಗಳು ಪ್ರತಿಭಟನೆ ನಡೆಸಿವೆ. ಆದರೆ ಸರ್ಕಾರ ಗಂಭೀರವಾಗಿ ತೆಗೆದುಕೊಂಡಿಲ್ಲ. ಕಳೆದ ಎರಡು ವರ್ಷಗಳಿ ಬಳಿಕ ಕಾಟಾಚಾರಕ್ಕೆ ಅಧಿವೇಶನ ಮಾಡಿದಂತಾಗಿದೆ ಎಂದಿದ್ದಾರೆ.
ಬಿ.ಎಸ್.ಯಡಿಯೂರಪ್ಪ ಅವರು ಮುಖ್ಯಮಂತ್ರಿ ಇದ್ದಿದ್ದರೆ ಈ ಬಾರಿಯೂ ಬೆಳಗಾವಿಯಲ್ಲಿ ಅಧಿವೇಶನ ನಡೆಯುತ್ತಿರಲಿಲ್ಲ. ಉತ್ತರ ಕರ್ನಾಟಕದವರಾದ ಬಸವರಾಜ್ ಬೊಮ್ಮಾಯಿ ಅವರು ಇರುವ ಕಾರಣದಿಂದ ಅಧಿವೇಶನ ನಡೆದಿದೆ ಎಂದು ಹೇಳಿದರು.
ಹೆಚ್ಚು ಪಟ್ಟಣ ಪಂಚಾಯ್ತಿಗಳಲ್ಲಿ ಕಾಂಗ್ರೆಸ್ ಅಧಿಕಾರ:
ಪಟ್ಟಣ ಪಂಚಾಯ್ತಿ ಚುನಾವಣಾ ಪ್ರಚಾರಕ್ಕೆ ಇಂದು ಕೊನೆಯ ದಿನವಾಗಿದೆ. ಬುಧವಾರ, ಗುರುವಾರ ಪ್ರಚಾರ ನಡೆಸಿದ್ದೇವೆ. ಇವತ್ತು ಐದು ಕಡೆಗಳಲ್ಲಿ ಪಕ್ಷದ ಮುಖಂಡರು ಸೇರಿ ಕೈ ಅಭ್ಯರ್ಥಿಗಳ ಪರ ಪ್ರಚಾರ ನಡೆಸುತ್ತೇವೆ ಎಂದು ಸತೀಶ ಜಾರಕಿಹೊಳಿ ಹೇಳಿದರು.
ಹಾನಗಲ್ ಉಪಚುನಾವಣೆ, ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವು ಪಡೆದಂತೆ ಪಟ್ಟಣ ಪಂಚಾಯ್ತಿ ಚುನಾವಣೆಯಲ್ಲಿಯೂ ಜಯಭೇರಿ ಬಾರಿಸಲಿದ್ದೇವೆ. ಹೆಚ್ಚು ಪಟ್ಟಣ ಪಂಚಾಯ್ತಿಗಳಲ್ಲಿ ಕಾಂಗ್ರೆಸ್ ಅಧಿಕಾರ ಹಿಡಿಯಲಿದೆ ಎಂಬ ವಿಶ್ವಾಸ ವ್ಯಕ್ತ ಪಡಿಸಿದರು.