spot_img
spot_img

ಕೋವಿಡ್ 3ನೇ ಅಲೆಯ ನಿಯಂತ್ರಣಕ್ಕೆ ಸನ್ನದ್ಧರಾಗಿ: ಅಧಿಕಾರಿಗಳಿಗೆ ಸಚಿವ ಪ್ರಭು ಚವ್ಹಾಣ್ ಸೂಚನೆ

Must Read

- Advertisement -

ಬೀದರ – ಮುಂದಿನ ದಿನಗಳಲ್ಲಿ ಸಂಭವಿಸಬಹುದಾದ ಕೋವಿಡ್ 3ನೇ ಅಲೆ ಮಕ್ಕಳ ಮೇಲೆ ಹೆಚ್ಚಾಗಿ ಪರಿಣಾಮ ಬೀರುವ ಸಾಧ್ಯತೆ ಇದ್ದು, ಇದರ ನಿಯಂತ್ರಣಕ್ಕೆ ಎಲ್ಲ ರೀತಿಯ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು ಎಂದು ಪಶು ಸಂಗೋಪನೆ ಹಾಗೂ ಬೀದರ ಜಿಲ್ಲಾ ಉಸ್ತುವಾರಿ ಸಚಿವರಾದ ಪ್ರಭು ಚವ್ಹಾಣ್ ಅವರು ವಿವಿಧ ಇಲಾಖೆಗಳ ಅಧಿಕಾರಿಗಳಿಗೆ ಸೂಚಿಸಿದರು.

ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜೂ.5ರಂದು ನಡೆದ ಜನಪ್ರತಿನಿಧಿಗಳು, ಆರೋಗ್ಯ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳ ಸಭೆಯಲ್ಲಿ ಸಚಿವರು ಮಾತನಾಡಿದರು.

ಮುಖ್ಯಮಂತ್ರಿಗಳು, ಸಚಿವರು ಹಾಗೂ ಸರ್ಕಾರದ ಕಾರ್ಯದರ್ಶಿಗಳೊಂದಿಗೆ ನಿರಂತರ ಸಂಪರ್ಕದಲ್ಲಿದ್ದು, ಕೋವಿಡ್ ನಿಯಂತ್ರಿಸಲು ಜಿಲ್ಲೆಗೆ ಬೇಕಿರುವ ಅವಶ್ಯಕತೆಗಳ ಬಗ್ಗೆ ಮನವರಿಕೆ ಮಾಡಿದ್ದೇನೆ. ಕೋವಿಡ್ ರೋಗಿಗಳಿಗೆ ಸೂಕ್ತ ಚಿಕಿತ್ಸೆ ಕಲ್ಪಿಸಲು ಬೇಕಿರುವ ಎಲ್ಲ ಅಗತ್ಯತೆಗಳನ್ನು ಆರೋಗ್ಯ ಸಚಿವರ ಮೂಲಕ ಪೂರೈಸಿಕೊಳ್ಳಲು ಪ್ರಯತ್ನಿಸಲಾಗುತ್ತಿದೆ.

- Advertisement -

ಜಿಲ್ಲೆಯಲ್ಲಿರುವ ಯಾವುದಾದರೂ ಆಸ್ಪತ್ರೆಗಳಲ್ಲಿ ಕೋವಿಡ್ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಯಾವುದೇ ರೀತಿಯ ಕೊರತೆಯಿದ್ದಲ್ಲಿ ಮುಂಚಿತವಾಗಿ ಪರಿಹರಿಸಿಕೊಳ್ಳಬೇಕು ಎಂದು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ಹಾಗೆಯೇ ಮಕ್ಕಳ ಚಿಕಿತ್ಸೆ ಕುರಿತಂತೆ ಸರ್ಕಾರ ಹೊರಡಿಸಲಿರುವ ಮಾರ್ಗಸೂಚಿಗಳು ಜಿಲ್ಲೆಯಲ್ಲಿ ಕಡ್ಡಾಯವಾಗಿ ಪಾಲನೆಯಾಗುವಂತೆ ನೋಡಿಕೊಳ್ಳಬೇಕು ಎಂದು ನಿರ್ದೇಶನ ನೀಡಿದರು.

ಕೋವಿಡ್ 3ನೇ ಅಲೆಯನ್ನು ಯಶಸ್ವಿಯಾಗಿ ತಡೆಯಲು ಮಕ್ಕಳಲ್ಲಿ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುವ ಅವಶ್ಯಕತೆಯಿದೆ. ಮುಂಚಿತವಾಗಿ ಸೋಂಕು ನಿಯಂತ್ರಣ ಕುರಿತು ಜಾಗೃತಿ ಮೂಡಿಸಿ, ಪೋಷಕರಲ್ಲಿರುವ ಭಯವನ್ನು ಹೋಗಲಾಡಿಸಬೇಕು. ಜಿಲ್ಲಾಡಳಿತ ಹಾಗೂ ಆರೋಗ್ಯ ಇಲಾಖೆ ಈ ನಿಟ್ಟಿನಲ್ಲಿ ಇನ್ನಷ್ಟು ಪರಿಣಾಮಕಾರಿಯಾಗಿ ಕೆಲಸ ಮಾಡಬೇಕು ಎಂದು ಸಚಿವರು ನಿರ್ದೇಶನ ನೀಡಿದರು.

- Advertisement -

ಜಿಲ್ಲಾಡಳಿತ, ಆರೋಗ್ಯ ಇಲಾಖೆ, ಪೊಲೀಸ್ ಇಲಾಖೆ ಸೇರಿದಂತೆ ಎಲ್ಲಾ ಇಲಾಖೆಗಳು ಒಗ್ಗಟ್ಟಾಗಿ ಕೆಲಸ ಮಾಡಿದ್ದರಿಂದ ಜಿಲ್ಲೆಯಲ್ಲಿ ಕೋವಿಡ್ ನಿಯಂತ್ರಣಕ್ಕೆ ಬರುತ್ತಿದೆ. ಪ್ರಕರಣಗಳು ಕಡಿಮೆಯಾಗಿವೆ ಎಂದು ನಿರಾಳರಾಗಬೇಕಿಲ್ಲ. ಸೋಂಕು ಸಂಪೂರ್ಣ ಶೂನ್ಯಕ್ಕೆ ಬರುವವರೆಗೆ ಪ್ರಯತ್ನ ಸಾಗಬೇಕು. 3ನೇ ಅಲೆಯ ಪ್ರಭಾವ ಜಿಲ್ಲೆಯ ಮೇಲೆ ಬೀಳದಂತೆ ಎಲ್ಲರೂ ಈ ಹಿಂದಿನಂತೆ ಕೆಲಸ ಮಾಡಬೇಕು ಎಂದು ಸಚಿವರು ಮನವಿ ಮಾಡಿದರು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ವಿ.ಜಿ ರೆಡ್ಡಿ ಹಾಗೂ ಬೀದರ ಬ್ರಿಮ್ಸ್ ನಿರ್ದೇಶಕ ಡಾ.ಶಿವಕುಮಾರ ಅವರು ಮಾತನಾಡಿ, ಆರೋಗ್ಯ ಇಲಾಖೆ ಹಾಗೂ ಬೀದರ ಬ್ರಿಮ್ಸ್ ನಿಂದ ಕೈಗೊಂಡಿರುವ ಸಿದ್ಧತೆಗಳ ಬಗ್ಗೆ ಸಭೆಗೆ ಮಾಹಿತಿ ನೀಡಿದರು.

ಈ ಸಂದರ್ಭದಲ್ಲಿ ಲೋಕಸಭೆ ಸದಸ್ಯರಾದ ಭಗವಂತ ಖೂಬಾ, ಶಾಸಕರಾದ ರಾಜಶೇಖರ ಪಾಟೀಲ, ಬಂಡೆಪ್ಪಾ ಖಾಶೆಂಪೂರ್, ರಹೀಂಖಾನ್, ಶರಣು ಸಲಗರ್, ಕೆಎಸ್‍ಎಸ್‍ಐಡಿಸಿ ಅಧ್ಯಕ್ಷರಾದ ಡಾ.ಶೈಲೇಂದ್ರ ಬೆಲ್ದಾಳೆ, ಬೀದರ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಬಾಬು ವಾಲಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಿ.ಎಲ್ ನಾಗೇಶ, ಅಪರ ಜಿಲ್ಲಾಧಿಕಾರಿ ರುದ್ರೇಶ ಘಾಳಿ, ವೈದ್ಯಾಧಿಕಾರಿಗಳಾದ ಡಾ.ಶಿವಕುಮಾರ ಶೇಟಕಾರ್, ಡಾ.ರಾಜೇಶ ಪಾರಾ, ಡಾ.ಚಂದ್ರಕಾಂತ ಮೇದಾ, ಆರೋಗ್ಯ ಇಲಾಖೆ, ಬ್ರಿಮ್ಸ್ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

- Advertisement -
- Advertisement -

Latest News

ಭತ್ತದ ನಾಡು ಕೆ.ಆರ್.ನಗರ ಕಾವೇರಿ ತೀರದ ಅರ್ಕೇಶ್ವರ

ನಾವು ಕಪ್ಪಡಿ ದರ್ಶನ ಮಾಡಿಕೊಂಡು ಕೆ.ಆರ್.ನಗರದ ಅರ್ಕೇಶ್ವರ ದೇವಸ್ಥಾನ ನೋಡಲು ಪ್ರಯಾಣ ಮುಂದುವರೆಸಿದೆವು. ಕೆ.ಆರ್.ನಗರದಿಂದ ಹಾಸನ ರಸ್ತೆಯಲ್ಲಿ ಮೂರ್ನಾಲ್ಕು ಕಿ.ಮೀ. ದೂರದಲ್ಲಿ ಕಾವೇರಿ ನದಿಯ ದಂಡೆಯಲ್ಲಿ...
- Advertisement -

More Articles Like This

- Advertisement -
close
error: Content is protected !!
Join WhatsApp Group